ಉಪ್ಪುಂದ, ಸೆ. 12: ಪ್ರಸ್ತುತ ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ರಾಜ್ಯ ಸರಕಾರದಿಂದ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಯೋಜನೆಗಳು ಅನುಷ್ಠಾನ ಗೊಳ್ಳುತ್ತಿಲ್ಲ, ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡುವ ಸಲುವಾಗಿ ನಿರಂತರವಾಗಿ ಕ್ಷೇತ್ರ ಭೇಟಿ ಮಾಡಿ ಯೋಜನೆಗಳ ಪ್ರಗತಿ ಬಗ್ಗೆ ಕೆಳ ಹಂತದ ಅಧಿಕಾರಿಗಳಲ್ಲಿ ವಿಚಾರಿಸುವುದು ಹಾಗೂ ಈಗಾಗಲೇ ಅನುಷ್ಠಾನಗೊಂಡಿರುವ ಅಭಿವೃದ್ಧಿ ಯೋಜನೆಗಳು ಜನರಿಗೆ ದೊರಕುತ್ತಿರುವ ಬಗ್ಗೆ ಆಯಾಯ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾಳಜಿ ವಹಿಸಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧ ಪಟ್ಟಂತೆ ಅನುಷ್ಠಾನಗೊಂಡಿರುವ ಹಾಗೂ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳ ಪ್ರಗತಿ ಬಗ್ಗೆ ಜಿಲ್ಲಾ ಕೇಂದ್ರದಲ್ಲಿ ಶಾಸಕ ಸಭೆ ನಡೆಸಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅವರು ಚರ್ಚಿಸಿದರು.
ಕರ್ನಾಟಕ ನೀರಾವರಿ ಅಭಿವೃದ್ಧಿ ನಿಗಮ ವಾರಾಹಿ ಯೋಜನೆ ಕಾರ್ಯ ಪಾಲಕ ಎಂಜಿನಿಯರ್, ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಎಂಜಿನಿಯರ್, ಬಂದರು, ಒಳ ನಾಡು ಜಲ ಸಾರಿಗೆ ಇಲಾಖೆ ಕಾರ್ಯ ನಿರ್ವಾಹಕ ಎಂಜಿನಿಯರ್, ಕೆ.ಆರ್. ಐ.ಡಿ.ಎಲ್. ಕಾರ್ಯ ನಿರ್ವಾಹಕ ಎಂಜಿನಿಯರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

